16 December 2025 | Join group

ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳ ವದಂತಿ: ರಾಜ್ಯಾದ್ಯಂತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಸೂಚನೆ

  • 15 Dec 2025 07:16:01 PM

ಬೆಂಗಳೂರು: ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

 

ಈ ಕುರಿತು ಶನಿವಾರ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಜನರಲ್ಲಿ ಅನಗತ್ಯ ಆತಂಕ ಉಂಟುಮಾಡುತ್ತಿದೆ. ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ” ಎಂದು ಹೇಳಿದರು.

 

ಒಂದು ವೇಳೆ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ಅಥವಾ ಹಾನಿಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದ ಮೊಟ್ಟೆ ಉತ್ಪಾದಕರು ಹಾಗೂ ಪೂರೈಕೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

 

ಅದೇ ವೇಳೆ, “ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆಗಳಲ್ಲಿ ಯಾವುದೇ ರೀತಿಯ ಹಾನಿಕಾರಕ ಅಥವಾ ಕ್ಯಾನ್ಸರ್‌ಕಾರಕ ಅಂಶಗಳು ಕಂಡುಬಂದಿಲ್ಲ. ಆದ್ದರಿಂದ ಜನರು ವದಂತಿಗಳಿಗೆ ಕಿವಿಗೊಡದೆ ಆತಂಕಪಡುವ ಅಗತ್ಯವಿಲ್ಲ” ಎಂದು ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು.

 

ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಪರೀಕ್ಷಾ ವರದಿಗಳು ಲಭ್ಯವಾದ ಬಳಿಕ ಸಂಪೂರ್ಣ ವಿವರಗಳನ್ನು ಸಾರ್ವಜನಿಕರಿಗೆ ಪ್ರಕಟಿಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.