20 September 2026 |

ರಸ್ತೆ ಬದಿ ಪತ್ತೆಯಾದ ನವಜಾತ ಶಿಶು ಚಿಕಿತ್ಸೆ ಫಲಿಸದೆ ಸಾವು

  • 07 Sep 2026 05:19:41 PM

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

 

ಮನೆಯೊಂದಕ್ಕೆ ತೆರಳುವ ಕಾಲುದಾರಿಯ ಬಳಿ ನವಜಾತ ಶಿಶು ಪತ್ತೆಯಾಗಿದ್ದು, ಸ್ಥಳೀಯರು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಶಿಶು ಕೆಲವೇ ಸಮಯದ ಹಿಂದೆ ಜನಿಸಿರುವ ಸಾಧ್ಯತೆ ಇತ್ತು ಎನ್ನಲಾಗಿದೆ.

 

ಆಸ್ಪತ್ರೆಯಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ಮಗುವಿನಲ್ಲಿ ಹೃದಯ ಬಡಿತ ಕಂಡುಬಂದಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಮುಂದುವರಿದರೂ ಮಗು ಬದುಕುಳಿಯಲಿಲ್ಲ.

 

ಘಟನೆಯ ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟುಹೋದವರು ಯಾರು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

 

ಈ ಹಿನ್ನೆಲೆಯಲ್ಲಿ ಹೂಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಮಗುವನ್ನು ಬಿಟ್ಟುಹೋದ ವ್ಯಕ್ತಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.