ಮಂಡ್ಯ: ಗೌರಿ-ಗಣೇಶ ಹಬ್ಬ ಮುಗಿಸಿ ಬೆಂಗಳೂರಿನತ್ತ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರಿಗೆ ಹಾಲಿನ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ, ಪತಿ, ಪತ್ನಿ ಹಾಗೂ 8 ವರ್ಷದ ಮಗಳು ಮೃತಪಟ್ಟಿರುವ ದುರ್ಘಟನೆ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕನಕಪುರ ತಾಲ್ಲೂಕಿನ ಕೂತನಹಳ್ಳಿ ನಿವಾಸಿಗಳಾದ ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನ (8) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುತ್ತುರಾಜ್ ಬೆಂಗಳೂರಿನ ಪೀಣ್ಯದಲ್ಲಿರುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪತ್ನಿಯ ತವರು ಮನೆಗೆ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಹಬ್ಬ ಮುಗಿದ ಬಳಿಕ ಕೆಲಸಕ್ಕೆ ಹಾಜರಾಗಬೇಕಿದ್ದ ಕಾರಣ, ಇಂದು ಬೆಳಗ್ಗೆ ನಾಲ್ವರೂ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಆರಂಭಿಸಿದ್ದರು.
ಕೊಪ್ಪದ ಬಳಿ ಸ್ಕೂಟರ್ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಹಾಲಿನ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಶವಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಹಾಗೂ ಮಿಮ್ಸ್ ಶವಾಗಾರಕ್ಕೆ ಮಂಡ್ಯ ಎಸ್ಪಿ ಶೋಭರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹಾಲಿನ ಕ್ಯಾಂಟರ್ ಹಾಗೂ ಅದರ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್ಪಿ ಶೋಭರಾಣಿ ತಿಳಿಸಿದ್ದಾರೆ. ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





