ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಹಗರಣದ ಆರೋಪಗಳ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಆದೇಶಿಸಿದೆ.
ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ವಹಿಸುವ ಬದಲು ಎಸ್‌ಐಟಿ ಮೂಲಕ ತನಿಖೆ ನಡೆಸಲು ಹೈಕೋರ್ಟ್ ಸೂಚಿಸಿದೆ. ಹಗರಣದ ಹಿಂದಿರುವ ಸಂಪೂರ್ಣ ವಿಚಾರವನ್ನು ತನಿಖೆ ನಡೆಸಿ, ಪ್ರಕರಣದ ನಿಜಾಂಶವನ್ನು ಹೊರತರುವಂತೆ ಪೀಠ ನಿರ್ದೇಶನ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಸಿಐಡಿ ಬಳಿಯಿರುವ ಎಲ್ಲ ದಾಖಲೆಗಳು ಮತ್ತು ಮಾಹಿತಿಯನ್ನು ಎಸ್‌ಐಟಿಗೆ ಹಸ್ತಾಂತರಿಸಬೇಕು. ಒಂದು ವಾರದೊಳಗೆ ದಾಖಲೆಗಳ ವರ್ಗಾವಣೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ತನಿಖೆಗೆ ಅಗತ್ಯವಿರುವ ಅಧಿಕಾರ ಮತ್ತು ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿಗೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡುವಂತೆ ರಾಜ್ಯ ಸರ್ಕಾರಕ್ಕೂ ಹೈಕೋರ್ಟ್ ನಿರ್ದೇಶನ ನೀಡಿದೆ. ತನಿಖಾ ಪ್ರಕ್ರಿಯೆಗೆ ಯಾವುದೇ ರೀತಿಯ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಪೀಠ ಸ್ಪಷ್ಟಪಡಿಸಿದೆ.
ಎಸ್‌ಐಟಿ ತನ್ನ ತನಿಖಾ ವರದಿಯನ್ನು 100 ದಿನಗಳೊಳಗೆ ಹೈಕೋರ್ಟ್‌ಗೆ ಸಲ್ಲಿಸಬೇಕು. ಇದರ ಜೊತೆಗೆ ಪ್ರತಿ 30 ದಿನಗಳಿಗೊಮ್ಮೆ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.





