ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಸ್ವೀಪರ್ ಟೂರಿಸ್ಟ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆ ಸೇರಿದಂತೆ ಕನಿಷ್ಠ 9 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ಬಸ್‌ನಲ್ಲಿ ಸುಮಾರು 35 ಪ್ರಯಾಣಿಕರು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್‌ನ ಎಸಿ ವ್ಯವಸ್ಥೆಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆಯನ್ನು ಪ್ರಾಥಮಿಕ ತನಿಖೆಯಲ್ಲಿ ವ್ಯಕ್ತಪಡಿಸಲಾಗಿದೆ.
ನೋಯ್ಡಾದಿಂದ ಮಹೋಬಾಗೆ ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ಬಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಧ್ಯರಾತ್ರಿಯಾಗಿದ್ದರಿಂದ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್‌ನೊಳಗೆ ದಟ್ಟ ಹೊಗೆ ತುಂಬಿದ ಬಳಿಕ ಕೆಲವರು ಎಚ್ಚೆತ್ತುಕೊಂಡಿದ್ದು, ಭಯದಿಂದ ಪ್ರಯಾಣಿಕರ ನಡುವೆ ನೂಕುನುಗ್ಗಲು ಉಂಟಾಗಿದೆ.
ಹೊಗೆಯಿಂದ ಉಸಿರಾಟಕ್ಕೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಹಲವು ಪ್ರಯಾಣಿಕರು ಬಸ್‌ನ ಗಾಜುಗಳನ್ನು ಒಡೆದು ಕಿಟಕಿಗಳ ಮೂಲಕ ಹೊರಗೆ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಈ ವೇಳೆ ಎಕ್ಸ್‌ಪ್ರೆಸ್‌ವೇ ಬದಿಯಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗುತ್ತಿರುವ ದೃಶ್ಯ ಕಂಡುಬಂದಿದೆ.
ಮಾಹಿತಿ ದೊರೆತ ಕೂಡಲೇ ಜೇವರ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸುದೀರ್ಘ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





