ಸುರತ್ಕಲ್: ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಹಳೆಯಂಗಡಿಯ ಕದಿಕೆ ನಿವಾಸಿ ಇಮ್ಮಿಯಾಝ್ (39) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಇಮ್ಮಿಯಾಝ್ ಅವರು ಖಾಸಗಿ ಶಿಪ್ಪಿಂಗ್ ಕಂಪನಿಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಕೆಲಸದ ನಿಮಿತ್ತ ಪಣಂಬೂರಿನಲ್ಲಿರುವ ಕಂಪನಿಯ ಲಾರಿ ಕಚೇರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಈ ಸಂದರ್ಭದಲ್ಲಿ ಚಲಿಸುತ್ತಿದ್ದ ಲಾರಿಗೆ ಇಮ್ಮಿಯಾಝ್ ಅವರ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿ, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಗಾಯಗಳ ತೀವ್ರತೆ ಹೆಚ್ಚಿದ್ದ ಕಾರಣ ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಇಮ್ಮಿಯಾಝ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿದು ಮಂಗಳೂರು ಉತ್ತರ (ಸುರತ್ಕಲ್) ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದಲ್ಲಿ ಭಾಗಿಯಾದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





