ಬೆಂಗಳೂರು: ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ಸತತ ಪ್ರವಾಸ ಮತ್ತು ತೀವ್ರ ಕಾರ್ಯಭಾರದಿಂದಾಗಿ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ನಿನ್ನೆ (ಮಂಗಳವಾರ) ರಾತ್ರಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯಕೀಯ ತಂಡವು ಪ್ರಸ್ತುತ ಅವರ ಆರೋಗ್ಯ ಸ್ಥಿತಿಯನ್ನು ನಿಗಾದೊಂದಿಗೆ ಪರಿಶೀಲಿಸುತ್ತಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಖರ್ಗೆ ಅವರ ಆರೋಗ್ಯದಲ್ಲಿ ಸುಧಾರಣೆ ಆಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
80 ವರ್ಷ ವಯಸ್ಸಿನ ಖರ್ಗೆ, ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ತೀವ್ರ ತೊಡಗಿಸಿಕೊಂಡಿದ್ದರು. ನಿರಂತರ ಪ್ರವಾಸ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ಶಾರೀರಿಕ ಅಸ್ವಸ್ಥತೆ ಉಂಟಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ಪಕ್ಷದ ಹಿರಿಯ ನಾಯಕರು ಹಾಗೂ ಬೆಂಬಲಿಗರು ಖರ್ಗೆ ಅವರ ಶೀಘ್ರ ಚೇತರಿಕೆಗಾಗಿ ಹಾರೈಕೆ ವ್ಯಕ್ತಪಡಿಸಿದ್ದಾರೆ.





