ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು RSS ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು. 'RSS ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕಡಿವಾಣ ಹಾಕಿ'… ಹೀಗಂತ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಸರ್ಕಾರಿ ನೌಕರರಿಗೆ 2021 ರ ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಯಾವುದೇ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಸದಸ್ಯರಾಗುವುದನ್ನು ಅಥವಾ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಮತ್ತು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸುತ್ತೋಲೆ ಹೊರಡಿಸಬೇಕು ಎಂದು ಅವರು ಕೋರಿದ್ದಾರೆ.
“ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಇಲ್ಲವೇ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಧ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಿದರೂ ಇತ್ತೀಚೆಗಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ನೌಕರರು ಭಾಗಿಯಾಗುವುದನ್ನು ಗಮನಿಸಲಾಗಿದೆ" ಎಂದು ನಮೂದಿಸಿದ್ದಾರೆ.
" ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ" ಎಂದು ಅವರು ಪತ್ರ ಬರೆದಿದ್ದಾರೆ.